ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಮೋಟಾರು ಸಲಕರಣೆಗಳನ್ನು ವಿತರಿಸಿದರು.
ಪಟ್ಟಣದ ಶಾಸಕರ ಕಛೇರಿ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ನಿಗಮದಡಿ ಆಯ್ಕೆಯಾದ 14 ಜನ ಫಲಾನುಭವಿಗಳಿಗೆ ಮೋಟಾರು, ಪೈಪು, ತಂತಿಗಳು ಸೇರಿದಂತೆ ಕೊಳವೆ ಬಾವಿಗೆ ಅಗತ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಔರಾದ(ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ನಿರಂತರ ಶ್ರಮಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ವಿಶೇಷವಾಗಿ ರೈತರ ಕೈ ಬಲಪಡಿಸಬೇಕು ಎನ್ನುವ ಸದಾಶಯದೊಂದಿಗೆ ಕೆಲಸ ಮಾಡುತ್ತಿದ್ದೇನೆ. ಇಂತಹ ಯೋಜನೆಗಳು ರೈತರಿಗೆ ಅನುಕೂಲಕರವಾಗಿ ಪರಿಣಮಿಸಲಿವೆ ಎಂದರು.
ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಸದಾಶಯದೊಂದಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಯೋಜನೆಯ ಸದುಪಯೋಗವನ್ನು ಪಡೆದು ಉತ್ತಮ ಕೃಷಿ ಬೆಳೆಗಳನ್ನು ಬೆಳೆಸಿ ಆರ್ಥಿಕವಾಗಿ ಸಬಲರಾಗಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಸೋಮಶೇಖರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
Related