Popular Posts

ಹೊಸ ವಿಬಿ-ಜಿಆರ್‌ಎಎಂ ಜಿ ಯೋಜನೆ ಕುರಿತು ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಮೂಡಿಸಲು ಮನವಿ

ಬೀದರ್: ಹೊಸ ‘ವಿ.ಬಿ-ಜಿ ರಾಮ್ ಜಿ’ (VB-G RAM G) ಕಾಯ್ದೆ-2025ರ ಕುರಿತು ಗ್ರಾಮೀಣ ಕೂಲಿ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನರೇಗಾ ಕೆಲಸದ ಸ್ಥಳಗಳಿಗೆ ಭೇಟಿ ನೀಡಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಹಾಗೂ ಸಹಕಾರ ನೀಡುವಂತೆ ಗ್ರಾಮ ಪಂಚಾಯತ್ ಕಾರ್ಮಿಕ ಮತ್ತು ಕಾಯಕ ಬಂಧುಗಳ ಅಭಿವೃದ್ಧಿ ಸಂಘ (ರಿ), ಬೀದರ್ ಮನವಿ ಮಾಡಿದೆ.

ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದು, ದಶಕಗಳಿಂದ ಜಾರಿಯಲ್ಲಿದ್ದ ನರೇಗಾ ಯೋಜನೆಯಲ್ಲಿ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದ್ದಾರೆ. ಹೊಸ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದ್ದು, ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಬದಲಾವಣೆಗಳನ್ನು ತರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಬಡ ಕೂಲಿ ಕಾರ್ಮಿಕರಿಗೆ ಹೊಸ ಕಾಯ್ದೆಯ ನಿಯಮಗಳು, ಉದ್ಯೋಗ ಪಡೆಯುವ ವಿಧಾನ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಹಾಗೂ ತಮ್ಮ ಕಾನೂನುಬದ್ಧ ಹಕ್ಕುಗಳ ಕುರಿತು ಸಮರ್ಪಕ ಮಾಹಿತಿ ಇಲ್ಲದೆ ಗೊಂದಲದಲ್ಲಿದ್ದಾರೆ ಎಂದು ಸಂಘ ಹೇಳಿದೆ.

ಈ ಹಿನ್ನೆಲೆಯಲ್ಲಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನರೇಗಾ ಕೆಲಸದ ಸ್ಥಳಗಳಿಗೆ ಭೇಟಿ ನೀಡಿ, ಕಾರ್ಮಿಕರನ್ನು ಸಂಘಟಿಸಿ ಹೊಸ ಯೋಜನೆಯ ನಿಯಮಗಳು ಹಾಗೂ ಕಾರ್ಮಿಕರ ಹಕ್ಕುಗಳ ಕುರಿತು ಸಮಗ್ರ ಅರಿವು ಮೂಡಿಸುವ ಜಾಗೃತಿ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.

ಜಾಗೃತಿ ಕಾರ್ಯಕ್ರಮ ನಡೆಸುವ ಸಂದರ್ಭದಲ್ಲಿ ಆಯಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಸೂಕ್ತ ಸಹಕಾರ ನೀಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ನಿರ್ದೇಶನ ನೀಡಬೇಕು ಎಂದು ಸಂಘ ಮನವಿ ಮಾಡಿದೆ.

ಅದೇ ರೀತಿ, ಕೆಲಸದ ಸ್ಥಳಗಳಲ್ಲಿ ಕಾರ್ಮಿಕರನ್ನು ಒಟ್ಟುಗೂಡಿಸಿ ಜಾಗೃತಿ ಮೂಡಿಸಲು ಕಾಯಕ ಬಂಧುಗಳು ಹಾಗೂ ಮೇಟ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಹೊಸ ಯೋಜನೆಗೆ ಸಂಬಂಧಿಸಿದ ಇಲಾಖೆಯ ಅಧಿಕೃತ ಕರಪತ್ರಗಳು ಹಾಗೂ ಪ್ರಚಾರ ಸಾಮಗ್ರಿಗಳನ್ನು ಸಂಘಕ್ಕೆ ಒದಗಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಗ್ರಾಮೀಣ ಭಾಗದ ಬಡ ಜನರ ಬದುಕಿಗೆ ಆಧಾರವಾಗಿರುವ ಉದ್ಯೋಗ ಖಾತ್ರಿ ಯೋಜನೆಯ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಲು ಜಾಗೃತಿ ಕಾರ್ಯಕ್ರಮಗಳು ಅಗತ್ಯವಾಗಿದ್ದು, ಸಂಘಕ್ಕೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿ ಅಗತ್ಯ ಸಹಕಾರ ನೀಡಬೇಕು ಎಂದು ಸಂಘದ ಅಧ್ಯಕ್ಷ ರಾಜಕುಮಾರ ಭಾವಿದೊಡ್ಡೆ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಜಡಗೆ ಮನವಿ ಮಾಡಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading

Subscribe