ಬೀದರ್: ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಅವರು, ಕುಟುಂಬದವರ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು. ಒಂದೇ ಗ್ರಾಮದ ಆರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಹಾಗೂ ಹೃದಯವಿದ್ರಾವಕ ಘಟನೆ ಎಂದು ತಿಳಿಸಿದ ಶಾಸಕರು, ಸಂಕಷ್ಟದ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ದೊರೆಯಬೇಕಾದ ಪರಿಹಾರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹಾರ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಡಾ. ಶೈಲೇಂದ್ರ ಬೆಲ್ದಾಳೆ ಅವರು ಕುಟುಂಬಸ್ಥರಿಗೆ ಭರವಸೆ ನೀಡಿದರು.
ಬಳಿಕ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳ ಕುಟುಂಬಸ್ಥರೊಂದಿಗೆ ಮಾತನಾಡಿ, ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.
ಬ್ರಿಮ್ಸ್ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯಿಂದ ಗಾಯಾಳುಗಳ ಆರೋಗ್ಯ ಪರಿಸ್ಥಿತಿ, ನೀಡಲಾಗುತ್ತಿರುವ ಚಿಕಿತ್ಸೆ, ಅಗತ್ಯ ಔಷಧೋಪಚಾರ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಶಾಸಕರು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಗಾಯಾಳುಗಳ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ ಅವರು, ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.
ಗಾಯಾಳುಗಳ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಶಾಸಕರು, ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರ ಮತ್ತು ತಮ್ಮ ವತಿಯಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಾಬುರಾವ ಕಾರಬಾರಿ, ಶಿವಕುಮಾರ ಸ್ವಾಮಿ, ಉದಯ ತೋರಣ, ಜೋಸೆಫ್ ಕೊಡ್ಡೆಕರ್, ಪರಮೇಶ ಪಾಟೀಲ, ಅರುಣಕುಮಾರ ಚಿಟ್ಟಾ ಮತ್ತಿತರರು ಉಪಸ್ಥಿತರಿದ್ದರು.
ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಗೊಂಡಿರುವ ಎಲ್ಲರೂ ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಡಾ. ಶೈಲೇಂದ್ರ ಬೆಲ್ದಾಳೆ ಅವರು ಹಾರೈಸಿದರು.
Discover more from ಕಲಿಯುಗದ ಕೂಗು
Subscribe to get the latest posts sent to your email.